ಹರಪನಹಳ್ಳಿ: ಮಾಜಿ ಶಾಸಕ ಎಂ.ಪಿ.ರವೀಂದ್ರ ಪ್ರತಿಷ್ಠಾನ ಹಾಗೂ ಎಂ.ಪಿ.ಲತಾ ಮಲ್ಲಿಕಾರ್ಜುನ ಅಭಿಮಾನಿಗಳ ಬಳಗದವತಿಯಿಂದ ತಾಲೂಕಿನ ನಿಟ್ಟೂರು ಗ್ರಾಮದ ಮರಳು ಪಾಯಿಂಟ್ ಬಳಿ ಜ.14 ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಸಂಕ್ರಾಂತಿ ಹಬ್ಬದ ಅಂಗವಾಗಿ ಮಕರ ಸಂಕ್ರಾಂತಿಯ ಔತಣಕೂಟ ಮತ್ತು ಜನಪದ ಸಂಗೀತ ಸಂಕ್ರಾಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಹೋದರ, ಮಾಜಿ ಶಾಸಕ ದಿ.ಎಂ.ಪಿ.ರವೀಂದ್ರ ಕೇವಲ ರಾಜಕಾರಣಿ ಆಗಿರಲಿಲ್ಲ. ಕಲೆ, ಸಂಸ್ಕೃತಿ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಉತ್ತೇಜನ ನೀಡುತ್ತಿದ್ದರು. ಅಲ್ಲದೇ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಸಿಹಿ ಭೋಜನ ಜೊತೆಗೆ ಎಲ್ಲರೂ ಒಟ್ಟಾಗಿ ಸಂಗೀತ ಆಲಿಸುವಂತಹ ಕಾರ್ಯಕ್ರಮ ಪ್ರತಿ ವರ್ಷ ನಡೆಸಿಕೊಂಡು ಬರುತ್ತಿದ್ದರು. ಹಾಗಾಗಿ ಅವರ ಅಗಲಿಕೆಯ ನಂತರವೂ ಅವರ ಯಾವುದೇ ಕಾರ್ಯಕ್ರಮಗಳನ್ನು ನಿಲ್ಲಿಸದೇ ಮುಂದುವರೆಸಿಕೊಂಡು ಹೋಗುತ್ತಿದ್ದೇನೆ. ಹೀಗಾಗಿ ಕಾರ್ಯಕ್ರಮ ಆಯೋಜಿಸಿದ್ದೇವೆ.
ಕೊರೊನಾ ಮೂರನೇ ಅಲೆ ಶುರುವಾಗಿದ್ದು, ಕೊರೊನಾ ರೂಪಾಂತರಿ ಒಮಿಕ್ರಾನ್ ನಿಯಂತ್ರಣ ನಿಟ್ಟಿನಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ. ಹೀಗಾಗಿ ಕೊರೊನಾ ನಿಯಂತ್ರಣ ನಿಯಮಾವಳಿ ಪ್ರಕಾರವೇ ಕಾರ್ಯಕ್ರಮ ಆಯೋಜಿಸಿದ್ದೇವೆ. ಕಾರ್ಯಕ್ರಮಕ್ಕೆ ಆಗಮಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಆಗಮಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಂಡು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಮನವಿ ಮಾಡಿದ್ದಾರೆ.